` ಹೇಗಿತ್ತು ವಿಶ್ವಸಂಸ್ಥೆಯಲ್ಲಿ ರಿಷಬ್ ಶೆಟ್ಟಿಯ ಕನ್ನಡ ಡಿಂಡಿಮ? - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ಹೇಗಿತ್ತು ವಿಶ್ವಸಂಸ್ಥೆಯಲ್ಲಿ ರಿಷಬ್ ಶೆಟ್ಟಿಯ ಕನ್ನಡ ಡಿಂಡಿಮ?
ಹೇಗಿತ್ತು ವಿಶ್ವಸಂಸ್ಥೆಯಲ್ಲಿ ರಿಷಬ್ ಶೆಟ್ಟಿಯ ಕನ್ನಡ ಡಿಂಡಿಮ?

ನಟ, ನಿರ್ದೇಶಕ ರಿಷಬ್ ಶೆಟ್ಟಿ ಜಿನಿವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಕನ್ನಡ ಡಿಂಡಿಮ ಮೊಳಗಿಸಿದ್ದಾರೆ. ಪರಿಸರ ಸಂರಕ್ಷಣೆ ಕುರಿತು ಕನ್ನಡದಲ್ಲಿಯೇ ಮಾತನಾಡಿದ್ದಾರೆ. ರಿಷಬ್ ಶೆಟ್ಟಿ ಏರಿದ ಎತ್ತರ, ಸಿಕ್ಕ ಮನ್ನಣೆ, ಪುರಸ್ಕಾರ ಅತ್ಯಂತ ಅಪರೂಪದ್ದು. ಅಲ್ಲಿ ರಿಷಬ್ ಶೆಟ್ಟಿ ಮಾತನಾಡಿದ್ದೇನು? ವಿವರ ಹೀಗಿದೆ.

ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟ ದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರವನ್ನು ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಕಾಳಜಿ, ಸಂರಕ್ಷಣೆ ಕುರಿತು ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ. ಪರಿಸರವನ್ನು ಕಾಪಾಡಲು ಜಾಗತಿಕ ಏಜೆನ್ಸಿಗಳು ಹಾಗೂ ಸರ್ಕಾರದ ಸಂಸ್ಥೆಗಳ ಮುಂಚೂಣಿಯಲ್ಲಿವೆ. ಜೊತೆಗೆ ಭಾರತದಲ್ಲಿ ನಾಗರಿಕ ಸಮಾಜ ಸಹ ಸ್ಥಳೀಯ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ. ಇಂತಹ ಪರಿಸರ ಪ್ರಜ್ಞೆಗೆ ಸಿನಿಮಾ ಮಾಧ್ಯಮ ಕನ್ನಡಿ ಹಿಡಿಯುತ್ತದೆ. ವಾಸ್ತವವನ್ನು ಜಗತ್ತಿಗೆ ತೋರಿಸುವ ಪ್ರಮುಖ ಪಾತ್ರ ನಿರ್ವಹಿಸುತ್ತವೆ, ಹಲವಾರು ಭಾರತೀಯ ಸಿನಿಮಾಗಳು ಕಾಲ್ಪನಿಕ ಹಾಗೂ ವಾಸ್ತವ ಕತೆಗಳ ಮೂಲಕ ಪರಿಸರ ಸಂರಕ್ಷಣೆಯ ವಿಚಾರ ಹೇಳಿವೆ. ಈ ಕುರಿತ ಜಾಗೃತಿ ಮೂಡಿಸಿವೆ ಎಂಬುದು ನಮ್ಮ ಹೆಮ್ಮೆ.

ಇತ್ತೀಚಿನ ನನ್ನ ಕಾಂತಾರ ಸಿನಿಮಾದಲ್ಲಿ ಸಹ, ನಿಸರ್ಗದ ಮಡಿಲಲ್ಲಿ, ಮನುಷ್ಯನ ಜೀವನ, ಜನರ ಸ್ಥಳೀಯ ನಂಬಿಕೆ, ಆಚರಣೆ ಕುರಿತ ಪ್ರಮುಖ ಅಂಶಗಳಿವೆ. ಪರಿಸರದ ಜತೆ ಅದರ ಜೊತೆಗೆ ನಾವು ಹೊಂದಿರುವ ಸಂಬಂಧ, ಪ್ರೀತಿ, ಬಾಂಧವ್ಯ, ಸಹಬಾಳ್ವೆ, ಸಾಂಸ್ಕೃತಿಕ ಹಿರಿಮೆಗಳು ಹೇಗೆ ಪರಸ್ಪರ ಅವಲಂಬಿಸಿದೆ ಎಂಬುದನ್ನು ಕಾಂತಾರ ಸಿನಿಮಾ ತೋರಿಸಿದೆ. ಸ್ಥಳೀಯ ಪರಿಸರ ರಕ್ಷಣೆ, ಇದರಲ್ಲಿ ಸರ್ಕಾರದ ಪಾತ್ರ, ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮುದಾಯಗಳ ಪ್ರಾಮುಖ್ಯತೆಗಳನ್ನು ಸಿನಿಮಾ ಎಳೆಎಳೆಯಾಗಿ ಬಿಚ್ಚಿಟ್ಟಿದೆ.

ಕಾಂತಾರದಂತಹ ಸಿನಿಮಾಗಳು ವಾಸ್ತವವನ್ನು ತೆರೆದಿಡುವ ಜತೆಗೆ ಪರಿಸರದ ಸವಾಲುಗಳನ್ನು ಎದುರಿಸಲು, ಸಮಸ್ಯೆಗಳನ್ನು ಬಗೆಹರಿಸಲು ಜನರಿಗೆ ಸ್ಫೂರ್ತಿ ನೀಡುತ್ತವೆ. ಭಾವನೆಗಳನ್ನು ಜಾಗೃತಗೊಳಿಸಿ, ಪರಿಸರ ರಕ್ಷಣೆಯಲ್ಲಿ ಜನ ತೆರಳುವಂತೆ ಮಾಡುತ್ತವೆ. ಇಂತಹ ಪ್ರಯತ್ನ ಪರಿಶ್ರಮವನ್ನು ಗುರುತಿಸಬೇಕು, ಪ್ರೋತ್ಸಾಹಿಸಬೇಕು ಎಂಬುದಾಗಿ ಕಲಿ ನೆರೆದಿರುವ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ.

ಇದು ರಿಷಬ್ ಶೆಟ್ಟಿ ಭಾಷಣದ ಸಾರ. ಭಾರತದ ಎಕೋಫಾನ್ ಸಂಸ್ಥೆಯ ಪ್ರತಿನಿಧಿಯಾಗಿ ಹೋಗಿದ್ದ ರಿಷಬ್ ಶೆಟ್ಟಿ ಪರಿಸರ ಪ್ರೀತಿ ಇಲ್ಲಿಗೇ ಮುಗಿಯುವುದಿಲ್ಲ. ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ನಡೆಸುತ್ತಿರುವ ಸೇವ್ ಟೈಗರ್ ಅಭಿಯಾನದಲ್ಲೂ ರಿಷಬ್ ಶೆಟ್ಟಿ ರಾಯಭಾರಿಯಾಗಿದ್ದಾರೆ. ಇದರ ಜೊತೆಗೆ ಇಂದು ಜಿನೀವಾದಲ್ಲಿ ಕಾಂತಾರ ಚಿತ್ರದ ವಿಶೇಷ ಪ್ರದರ್ಶನವೂ ನಡೆಯಲಿದೆ. ಈ ಮೂಲಕ ರಿಷಬ್ ಶೆಟ್ಟಿ, ಕಾಂತಾರ ಹಾಗೂ ಕನ್ನಡ ಜಗತ್ತಿನ ಅತಿ ದೊಡ್ಡ ಸಮುದಾಯವನ್ನು ಹಾಗೂ ಪ್ರಭಾವಿ ಮಾಧ್ಯಮಗಳನ್ನೂ ಮುಟ್ಟಲಿದೆ.

ರಿಷಬ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಹೆಮ್ಮೆಯ ಕನ್ನಡಿಗನೊಬ್ಬ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ಕನ್ನಡದಲ್ಲಿ ಮಾತನಾಡಿದ್ದು ನಿಜಕ್ಕೂ ಅದ್ಭುತ. ಅಭಿನಂದನೆಗಳು ರಿಷಬ್‌ ಶೆಟ್ಟಿ. ನಿಮ್ಮ ಕನ್ನಡ ಪ್ರೇಮಕ್ಕೆ ನನ್ನ ಹೃದಯಾಂತರಾಳದಿಂದ ಗೌರವವನ್ನು ಅರ್ಪಿಸುತ್ತೇನೆ. ಪರಿಸರವನ್ನು ಉಳಿಸಿ-ಬೆಳೆಸಲು ನಮ್ಮ ಸರ್ಕಾರ ಸಹ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಪರಿಸರ ಸಂರಕ್ಷಣೆಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ ರಿಷಬ್ ಶೆಟ್ಟಿ